ಬುಧವಾರ, ಜನವರಿ 18, 2017

ಹಾರ್ಡ್ ಡಿಸ್ಕ್ ಡ್ರೈವ್ ಮತ್ತು ಸಾಲಿಡ್ ಸ್ಟೇಟ್ ಡ್ರೈವ್

ಟಿ. ಜಿ. ಶ್ರೀನಿಧಿ

ಕಂಪ್ಯೂಟರಿನ ಭಾಗಗಳ ಬಗ್ಗೆ ಕೇಳಿದಾಗ ನಮಗೆ ಥಟ್ಟನೆ ನೆನಪಾಗುವ ಹೆಸರುಗಳ ಪೈಕಿ ಹಾರ್ಡ್ ಡಿಸ್ಕ್ ಕೂಡ ಒಂದು. ಮತ್ತೊಮ್ಮೆ ಬಳಸಲು ಬೇಕಾದ ಮಾಹಿತಿಯನ್ನು ಉಳಿಸಿಡಲು ನಾವು ಈ ಸಾಧನವನ್ನು ಬಳಸುತ್ತೇವೆ.

ಹಾರ್ಡ್ ಡಿಸ್ಕ್ ಎನ್ನುವ ಹೆಸರಿಗೆ ಕಾರಣ ಅದರಲ್ಲಿ ಬಳಕೆಯಾಗುವ ಲೋಹದ ತಟ್ಟೆಗಳು. ಅಯಸ್ಕಾಂತೀಯ ಲೇಪನವಿರುವ ಈ ತಟ್ಟೆಗಳ ಮೇಲೆ ಓಡಾಡುವ ಒಂದು ಪುಟ್ಟ ಕಡ್ಡಿಯಂತಹ ಸಾಧನ ನಮ್ಮ ಮಾಹಿತಿಯನ್ನು ಅಲ್ಲಿ ಬರೆದಿಡುತ್ತದೆ, ಬರೆದಿಟ್ಟ ಮಾಹಿತಿಯನ್ನು ಮತ್ತೆ ಓದಲೂ ನೆರವಾಗುತ್ತದೆ. ಈ ತಟ್ಟೆಗಳು, ಓದು-ಬರಹದ ಕಡ್ಡಿ, ಅದು ಓಡಾಡಲು ಬೇಕಾದ ವ್ಯವಸ್ಥೆಯೆಲ್ಲ ಸೇರಿದ್ದೇ ಹಾರ್ಡ್ ಡಿಸ್ಕ್ ಡ್ರೈವ್ (ಎಚ್‌ಡಿಡಿ). ಇದನ್ನು ನಾವು ಸರಳವಾಗಿ ಹಾರ್ಡ್ ಡಿಸ್ಕ್ ಎಂದು ಕರೆಯುತ್ತೇವೆ ಅಷ್ಟೆ: ಕಂಪ್ಯೂಟರಿನ ಒಳಗೆ ಅಡಕವಾಗಿರುವುದು ಇಂಟರ್ನಲ್ ಹಾರ್ಡ್ ಡಿಸ್ಕ್, ಪ್ರತ್ಯೇಕವಾಗಿ ಹೊರಗಿನಿಂದ ಜೋಡಿಸಬಹುದಾದದ್ದು ಎಕ್ಸ್‌ಟರ್ನಲ್ ಹಾರ್ಡ್‌ಡಿಸ್ಕ್.

ಪೆನ್‍ಡ್ರೈವ್ ಇತ್ಯಾದಿಗಳಿಗೆ ಹೋಲಿಸಿದರೆ ಹಾರ್ಡ್ ಡಿಸ್ಕ್‌ನಲ್ಲಿ ಶೇಖರಿಸಿಡಬಹುದಾದ ಮಾಹಿತಿಯ ಪ್ರಮಾಣ ಹೆಚ್ಚು, ಅದಕ್ಕೆ ತಗಲುವ ವೆಚ್ಚ ಕಡಿಮೆ. ಆದರೆ ಇಲ್ಲಿ ಚಲಿಸುವ ಭಾಗಗಳಿರುವುದರಿಂದ ಮಾಹಿತಿಯನ್ನು ಓದಿ-ಬರೆಯುವ ವೇಗ ಕಡಿಮೆ, ಯಾಂತ್ರಿಕ ವೈಫಲ್ಯದ ಸಾಧ್ಯತೆಯೂ ಉಂಟು. ಹಾಗಾಗಿ ಈಚೆಗೆ ಎಚ್‌ಡಿಡಿ‌ಗೆ ಪರ್ಯಾಯವಾಗಿ ಬಳಸಬಹುದಾದ ತಂತ್ರಜ್ಞಾನಗಳೂ ರೂಪುಗೊಳ್ಳುತ್ತಿವೆ.

ಇಂತಹ ಹೊಸ ತಂತ್ರಜ್ಞಾನಗಳಲ್ಲೊಂದು ಸಾಲಿಡ್ ಸ್ಟೇಟ್ ಡ್ರೈವ್ (ಎಸ್‌ಎಸ್‌ಡಿ). ಹಾರ್ಡ್ ಡಿಸ್ಕ್‌ನ ತಟ್ಟೆಗಳ, ಚಲಿಸುವ ಭಾಗಗಳ ಜಾಗದಲ್ಲಿ ಇದು ಫ್ಲಾಶ್ ಮೆಮೊರಿ ಚಿಪ್‌ಗಳನ್ನು ಬಳಸುತ್ತದೆ. ಪೆನ್‌ಡ್ರೈವ್‌ಗಳಲ್ಲಿ ಬಳಕೆಯಾಗುವುದೂ ಫ್ಲಾಶ್ ಮೆಮೊರಿಯೇ, ಆದರೆ ಎಸ್‌ಎಸ್‍ಡಿಯಲ್ಲಿ ಇನ್ನೂ ಹೆಚ್ಚು ಕಾರ್ಯಕ್ಷಮತೆಯ ಚಿಪ್‌ಗಳು ಬಳಕೆಯಾಗುತ್ತವೆ ಅಷ್ಟೇ.

ಎಸ್‌ಎಸ್‌ಡಿ‌ಗಳು ಹಾರ್ಡ್ ಡಿಸ್ಕ್‌ಗಿಂತ ಗಾತ್ರದಲ್ಲಿ ಚಿಕ್ಕದಾಗಿರುತ್ತವೆ, ಹೆಚ್ಚು ವೇಗವಾಗಿ ಕೆಲಸಮಾಡುತ್ತವೆ ಮತ್ತು ಅವುಗಳ ವಿಶ್ವಾಸಾರ್ಹತೆಯೂ ಹೆಚ್ಚು. ಆದರೆ ಅವುಗಳ ಬೆಲೆ ಎಚ್‌ಡಿಡಿ ಹೋಲಿಕೆಯಲ್ಲಿ ಬಹಳ ಹೆಚ್ಚು. ಸದ್ಯ ಹಲವು ದುಬಾರಿ ಕಂಪ್ಯೂಟರುಗಳಲ್ಲಿ ಮಾತ್ರವೇ ಅವು ಬಳಕೆಯಾಗುತ್ತಿವೆ.

ಹಾರ್ಡ್ ಡಿಸ್ಕ್ ಡ್ರೈವ್ ಹಾಗೂ ಸಾಲಿಡ್ ಸ್ಟೇಟ್ ಡ್ರೈವ್‌ಗಳೆರಡರ ತಂತ್ರಜ್ಞಾನಗಳನ್ನೂ ಒಟ್ಟಿಗೆ ಬಳಸುವ ಸಾಲಿಡ್ ಸ್ಟೇಟ್ ಹೈಬ್ರಿಡ್ ಡ್ರೈವ್ (ಎಸ್‌ಎಸ್‌ಎಚ್‌ಡಿ) ಎನ್ನುವ ಸಾಧನ ಕೂಡ ಇದೆ. ಸಾಮಾನ್ಯ ಹಾರ್ಡ್ ಡಿಸ್ಕ್ ಜೊತೆಗೆ ಕೊಂಚಮಟ್ಟಿನ ಸಾಲಿಡ್ ಸ್ಟೇಟ್ ಶೇಖರಣಾ ಸಾಮರ್ಥ್ಯವನ್ನೂ ಒದಗಿಸುವುದು ಈ ಸಾಧನದ ವೈಶಿಷ್ಟ್ಯ.

ಆಗಸ್ಟ್ ೨೮ - ೨೯, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನಗಳ ಸಂಯುಕ್ತರೂಪ

ಕಾಮೆಂಟ್‌ಗಳಿಲ್ಲ:

badge