ಸೋಮವಾರ, ಫೆಬ್ರವರಿ 13, 2017

ನಿಮಗೆ '೪೦೪ ಎರರ್' ಗೊತ್ತೇ?

ಟಿ. ಜಿ. ಶ್ರೀನಿಧಿ


ಕಂಪ್ಯೂಟರನ್ನು, ಮೊಬೈಲ್ ಫೋನನ್ನು ಬಳಸುವಾಗ ನಾವು ಆಗಿಂದಾಗ್ಗೆ ಹಲವು ದೋಷಗಳನ್ನು (ಎರರ್) ಎದುರಿಸಬೇಕಾಗಿ ಬರುವುದುಂಟು. ತಂತ್ರಾಂಶ - ಯಂತ್ರಾಂಶಗಳಲ್ಲಿನ ಯಾವುದೇ ವೈಫಲ್ಯ ಅಥವಾ ಅವನ್ನು ಬಳಸುವಲ್ಲಿ ನಮ್ಮದೇ ತಪ್ಪು ಇಂತಹ ದೋಷಗಳಿಗೆ ಕಾರಣವಾಗಬಹುದು.

ಕೆಲ ಬಾರಿ ದೋಷಗಳ ಪರಿಣಾಮವಷ್ಟೇ (ಕಂಪ್ಯೂಟರ್ ಕೆಲಸಮಾಡದಿರುವುದು, ಆಪ್ ತೆರೆದುಕೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವುದು, ಹೀಗೆ) ನಮ್ಮ ಗಮನಕ್ಕೆ ಬರುತ್ತದೆ, ನಿಜ. ಆದರೆ ಬಹಳಷ್ಟು ಸಂದರ್ಭಗಳಲ್ಲಿ ಅವು ಸಂದೇಶದ ರೂಪದಲ್ಲಿ ನಮ್ಮೆದುರು ಕಾಣಿಸಿಕೊಳ್ಳುತ್ತವೆ. ವಿಶ್ವವ್ಯಾಪಿ ಜಾಲದಲ್ಲಿ ಓಡಾಡುವಾಗ ಕಾಣಸಿಗುವ '೪೦೪', ಇಂತಹ ದೋಷಗಳಲ್ಲೊಂದು.

ನಾವು ತೆರೆಯಲು ಬಯಸಿದ ಯಾವುದೇ ವೆಬ್ ಪುಟ ಅಥವಾ ಕಡತವನ್ನು ತೆರೆಯುವುದು ಸಾಧ್ಯವಾಗದಿದ್ದಾಗ ಈ ದೋಷ ಉಂಟಾಗುತ್ತದೆ. ತಾಣದ ವಿಳಾಸ ಬದಲಾದಾಗ, ನಾವು ಅದನ್ನು ತಪ್ಪಾಗಿ ಟೈಪಿಸಿದಾಗ, ನಿರ್ದಿಷ್ಟ ಪುಟ/ಕಡತವನ್ನು ಆ ತಾಣದಿಂದ ತೆಗೆದುಹಾಕಿದಾಗ - ಹೀಗೆ ಈ ದೋಷಕ್ಕೆ ಅನೇಕ ಕಾರಣಗಳಿರಬಹುದು. ಆದರೆ ಇಂತಹ ಪ್ರತಿಯೊಂದು ಸನ್ನಿವೇಶದಲ್ಲೂ ಸಂಬಂಧಪಟ್ಟ ಜಾಲತಾಣ '೪೦೪ ನಾಟ್ ಫೌಂಡ್' ಎನ್ನುವ ಸಂದೇಶವನ್ನು ತೋರಿಸುವುದರಿಂದ ಇದರ ಹೆಸರು ಮಾತ್ರ ಬಳಕೆದಾರರ ನೆನಪಿನಲ್ಲಿ ಭದ್ರವಾಗಿ ಉಳಿದುಕೊಂಡುಬಿಟ್ಟಿದೆ!

ಅಂದಹಾಗೆ ನಿರ್ದಿಷ್ಟ ದೋಷಗಳು ಸಂಭವಿಸಿದಾಗ ಅವನ್ನು ಪ್ರತ್ಯೇಕ ಸಂಖ್ಯೆಗಳ (ಸ್ಟೇಟಸ್ ಕೋಡ್) ಮೂಲಕ ಗುರುತಿಸುವುದು ಕಂಪ್ಯೂಟರ್ ಜಗತ್ತಿನ ಸಾಮಾನ್ಯ ಅಭ್ಯಾಸ. ಬಹುತೇಕ ಸನ್ನಿವೇಶಗಳಲ್ಲಿ ಈ ಸಂಖ್ಯೆಯ ಪರಿಚಯ ತಂತ್ರಜ್ಞರಿಗಷ್ಟೇ ಇರುತ್ತದೆ; ಅದನ್ನು ಮೀರಿ ಸಾಮಾನ್ಯ ಬಳಕೆದಾರರಿಗೂ ಪರಿಚಿತವಾಗಿರುವುದು ಈ ೪೦೪ರ ಹೆಚ್ಚುಗಾರಿಕೆ. ಇದರ ಜನಪ್ರಿಯತೆ ಎಷ್ಟರಮಟ್ಟಿನದು ಎಂದರೆ ಏನು ಮಾಡಬೇಕೆಂದು ತೋಚದೆ ಪೆದ್ದುಪೆದ್ದಾಗಿ ಆಡುವವರನ್ನು ('ಕ್ಲೂಲೆಸ್') ೪೦೪ ಎಂದು ಗುರುತಿಸುವ ಅಭ್ಯಾಸವೂ ಇದೆ!

ಸೆಪ್ಟೆಂಬರ್ ೨, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ

1 ಕಾಮೆಂಟ್‌:

ವಿ.ರಾ.ಹೆ. ಹೇಳಿದರು...

೪೦೪ನಂತೆಯೇ ಬೇರೆ ಯಾವುದಾದರೂ ದೋಷದ ಕೋಡ್ ಮತ್ತು ವಿವರಣೆ ಇದ್ದರೆ ಮಾಹಿತಿಕೊಡಿ ಎಂದು ಕೋರಿಕೆ. ಇದುವರೆಗೂ ಅಂತರಜಾಲದಲ್ಲಿ ೪೦೪ ಬಿಟ್ಟರೆ ಬೇರೆ ದೋಷ ನೋಡೇ ಇಲ್ಲ! :)

badge