ಶುಕ್ರವಾರ, ಫೆಬ್ರವರಿ 24, 2017

ಆರ್‌ಜಿಬಿ ಮತ್ತು ಸಿಎಂವೈಕೆ

ಟಿ. ಜಿ. ಶ್ರೀನಿಧಿ


ಪ್ರಾಥಮಿಕ ಬಣ್ಣಗಳನ್ನು (ಪ್ರೈಮರಿ ಕಲರ್ಸ್) ಸೇರಿಸಿ ಹೊಸ ಬಣ್ಣಗಳನ್ನು ರೂಪಿಸಿಕೊಳ್ಳುವುದು ಹೊಸ ಸಂಗತಿಯೇನಲ್ಲ. ಯಾವ ಬಣ್ಣಕ್ಕೆ ಯಾವ ಬಣ್ಣ ಸೇರಿಸಿದರೆ ಯಾವ ಬಣ್ಣ ಸೃಷ್ಟಿಯಾಗುತ್ತದೆ ಎನ್ನುವುದನ್ನು ಮಕ್ಕಳು ಶಾಲೆಯ ದಿನಗಳಲ್ಲೇ ಆಸಕ್ತಿಯಿಂದ ಕಲಿಯುತ್ತಾರೆ.

ಭೌತಿಕ ಜಗತ್ತಿನಲ್ಲಿರುವಂತೆ ಡಿಜಿಟಲ್ ಜಗತ್ತಿನಲ್ಲೂ ಅಸಂಖ್ಯ ಬಣ್ಣಗಳು ನಮ್ಮ ಮುಂದೆ ಕಾಣಸಿಗುತ್ತವಲ್ಲ, ಅಲ್ಲಿಯೂ ಇಂತಹುದೇ ತಂತ್ರ ಬಳಕೆಯಾಗುತ್ತದೆ. ಕಂಪ್ಯೂಟರ್, ಸ್ಮಾರ್ಟ್‌ಫೋನ್ ಇತ್ಯಾದಿಗಳಲ್ಲಿ ನಮಗೆ ಕಾಣಿಸುವ ಎಲ್ಲ ಬಣ್ಣಗಳೂ ಕೆಂಪು, ಹಸಿರು ಹಾಗೂ ನೀಲಿ ಬಣ್ಣದ ಬೆಳಕಿನ ಸಂಯೋಜನೆಯಿಂದ ರೂಪುಗೊಂಡಿರುತ್ತವೆ.

ಮೂರೂ ಬಣ್ಣಗಳ ಇಂಗ್ಲಿಷ್ ಹೆಸರಿನ (ರೆಡ್-ಗ್ರೀನ್-ಬ್ಲೂ) ಮೊದಲ ಅಕ್ಷರಗಳನ್ನು ಸೇರಿಸಿ ಈ ವ್ಯವಸ್ಥೆಯನ್ನು ಆರ್‌ಜಿಬಿ ಎಂದು ಕರೆಯಲಾಗುತ್ತದೆ. ನಮ್ಮ ಆಯ್ಕೆಯ ಬಣ್ಣ ಕಾಣಬೇಕಾದರೆ ಈ ಮೂರು ಬಣ್ಣಗಳು ಯಾವ ಪ್ರಮಾಣದಲ್ಲಿ ಬೆರೆಯಬೇಕು ಎನ್ನುವುದನ್ನು ಪ್ರತ್ಯೇಕ ಸಂಖ್ಯೆಗಳು ಸೂಚಿಸುತ್ತವೆ. ಮೂರೂ ಬಣ್ಣಗಳನ್ನು ಸೊನ್ನೆಯ ಮಟ್ಟದಲ್ಲಿಟ್ಟರೆ ಕಪ್ಪು, ಗರಿಷ್ಠ ಮಟ್ಟಕ್ಕೆ ಕೊಂಡೊಯ್ದರೆ ಬಿಳಿ, ಕೆಂಪು-ಹಸಿರು ಮಾತ್ರವೇ ಬಳಕೆಯಾದರೆ ಹಳದಿ - ಹೀಗೆ ಮೂರು ಬಣ್ಣಗಳ ಪ್ರಮಾಣವನ್ನು ಬದಲಿಸುತ್ತ ಹೋದಂತೆ ಹೊಸ ಬಣ್ಣಗಳು ಸೃಷ್ಟಿಯಾಗುತ್ತವೆ.

ಅಂದಹಾಗೆ ಆರ್‌ಜಿಬಿ ಸಂಯೋಜನೆಯಲ್ಲಿ ರೂಪುಗೊಂಡ ಬಣ್ಣಗಳು ಪರದೆಯ ಮೇಲೆ ಪ್ರದರ್ಶನಕ್ಕೆ ಹೊಂದುವಷ್ಟು ಚೆನ್ನಾಗಿ ಮುದ್ರಣಕ್ಕೆ ಹೊಂದಿಕೊಳ್ಳುವುದಿಲ್ಲ. ಹಾಗಾಗಿ ಮುದ್ರಣವನ್ನೇ ಉದ್ದೇಶವಾಗಿಟ್ಟುಕೊಂಡು ಕಂಪ್ಯೂಟರ್ ಚಿತ್ರಗಳನ್ನು ರೂಪಿಸುವಾಗ ಆರ್‌ಜಿಬಿ ಬದಲಿಗೆ 'ಸಿಎಂವೈಕೆ'ಯನ್ನೂ ಬಳಸಲಾಗುತ್ತದೆ. ಆರ್‌ಜಿಬಿಯಲ್ಲಿ ಕೆಂಪು, ಹಸಿರು, ನೀಲಿ ಇದ್ದಂತೆ ಸಿಎಂ‌ವೈಕೆಯಲ್ಲಿ ಸಿಯಾನ್ (ಹಸಿರು ಛಾಯೆಯ ನೀಲಿ), ಮಜೆಂಟಾ (ಕಡುಗೆಂಪು), ಹಳದಿ ಹಾಗೂ ಕಪ್ಪು ಬಣ್ಣಗಳನ್ನು ಬಳಸಲಾಗುತ್ತದೆ.

ಆಗಸ್ಟ್ ೧೩, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ

ಕಾಮೆಂಟ್‌ಗಳಿಲ್ಲ:

badge