ಗುರುವಾರ, ಜೂನ್ 1, 2017

ಒಂದಷ್ಟು ಮಾತು, 'ಫಾಂಟ್' ಕುರಿತು...

ಟಿ. ಜಿ. ಶ್ರೀನಿಧಿ

ಮಾಹಿತಿಯ ಮಹಾಪೂರವೇ ನಮ್ಮನ್ನು ಆವರಿಸಿರುವುದು ಹೊಸ ಸಂಗತಿಯೇನಲ್ಲ. ಅದರಲ್ಲಿ ಪಠ್ಯರೂಪದ ಮಾಹಿತಿಯ ಪಾಲು ಬಹಳ ದೊಡ್ಡದು. ನೀವು ಓದುತ್ತಿರುವ ಪತ್ರಿಕೆ, ಕಂಪ್ಯೂಟರಿನಲ್ಲಿ ತೆರೆದಿರುವ ವೆಬ್‌ಸೈಟು, ಮೊಬೈಲ್ ಪರದೆಯಲ್ಲಿ ಕಾಣಿಸಿಕೊಂಡಿರುವ ಹೊಸ ವಾಟ್ಸ್‌ಆಪ್ ಸಂದೇಶ - ಒಂದಲ್ಲ ಒಂದು ಬಗೆಯಲ್ಲಿ ಪಠ್ಯರೂಪದ ಮಾಹಿತಿ ನಮ್ಮೆದುರು ಕಾಣಿಸಿಕೊಳ್ಳುತ್ತಲೇ ಇರುತ್ತದೆ.

ಈ ಮಾಹಿತಿಯೆಲ್ಲ ನಮಗೆ ತಲುಪಬೇಕಾದರೆ ಅದನ್ನು ಯಾರೋ ಒಬ್ಬರು ಕಂಪ್ಯೂಟರಿನಲ್ಲಿ ಅಥವಾ ಮೊಬೈಲಿನಲ್ಲಿ ಟೈಪಿಸಬೇಕು ತಾನೆ, ಹಾಗೆ ಮಾಡಲು ಅಕ್ಷರಶೈಲಿಗಳು ಬೇಕು.
ಕಂಪ್ಯೂಟರಿನ ಭಾಷೆಯಲ್ಲಿ ಇವಕ್ಕೆ ಫಾಂಟ್‌ಗಳೆಂದು ಹೆಸರು. ವಿವಿಧ ಭಾಷೆಗಳಿಗೆ ವಿವಿಧ ಫಾಂಟುಗಳು ಲಭ್ಯ; ಒಂದೊಂದು ಫಾಂಟಿನ ಅಕ್ಷರಗಳೂ ಒಂದೊಂದು ವಿನ್ಯಾಸದಲ್ಲಿರುವುದು ಸಾಮಾನ್ಯ.

ಫಾಂಟ್ ಅನ್ನು ಒಂದಷ್ಟು ಆಕಾರಗಳ ಗುಂಪು ಎಂದು ಕರೆಯಬಹುದು. ಅಕ್ಷರವನ್ನೋ ಅಂಕೆಯನ್ನೋ ಲೇಖನ ಚಿಹ್ನೆಯನ್ನೋ ಪ್ರತಿನಿಧಿಸುವ ಇಂತಹ ಆಕಾರಗಳನ್ನು 'ಗ್ಲಿಫ್', ಅಂದರೆ ಅಕ್ಷರಭಾಗಗಳೆಂದು ಕರೆಯುತ್ತಾರೆ. ಇಂಗ್ಲಿಷಿನ ಉದಾಹರಣೆಯನ್ನೇ ತೆಗೆದುಕೊಂಡರೆ ದೊಡ್ಡಕ್ಷರದ 'ಎ' ಒಂದು ಗ್ಲಿಫ್, ಸಣ್ಣಕ್ಷರದ 'ಎ' ಇನ್ನೊಂದು ಗ್ಲಿಫ್. ಕನ್ನಡದಂತಹ ಭಾಷೆಗಳಲ್ಲಿ ಕೆಲವು ಅಕ್ಷರಗಳಿಗೆ ಪ್ರತ್ಯೇಕ ಗ್ಲಿಫ್ ಇದ್ದರೆ ಇನ್ನು ಕೆಲ ಅಕ್ಷರಗಳು ಹಲವು ಗ್ಲಿಫ್‌ಗಳ ಜೋಡಣೆಯಿಂದ ರೂಪುಗೊಳ್ಳುತ್ತವೆ. ಈ ಜೋಡಣೆ ಬೇರೆಬೇರೆ ಫಾಂಟುಗಳಲ್ಲಿ ಬೇರೆಬೇರೆ ರೀತಿಯಲ್ಲಿರಬಹುದು.
ಹೆಚ್ಚಿನ ಮಾಹಿತಿಗಾಗಿ ಇದನ್ನೂ ಓದಿ: ಫಾಂಟ್ ಫಂಡಾ!
ಮೇ ೩೧, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ
badge